ನಿಸ್ವನ - ಭಾವಗೀತ
- ಕವನ: ಅಂಬಿಕಾತನಯದತ್ತ
- ಕವನದ ಕಾಪೀರೈಟ್: ಪುನರ್ವಸು ಬೇಂದ್ರೆ
- ರಾಗಸಂಯೋಜನೆ/ಗಾಯನ/ವೀಣೆ: ಅಂಶುಮಾನ್ ಕೆ ಆರ್
- ಸ್ಟೂಡಿಯೋ/ವಾದ್ಯಸಂಯೋಜನೆ: ಹೇಮಂತ್ ಕುಮಾರ್
- ತಾಳವಾದ್ಯ: ಬಿ ಎಸ್ ವೇಣುಗೋಪಾಲ್ ರಾಜು (ತಬಲಾ ವೇಣು)
- ಗಿಟಾರ್: ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್)
- ಬಾನ್ಸುರೀ/ಕೊಳಲು: ರಘುನಂದನ್ ರಾಮಕೃಷ್ಣ
- ಸಿತಾರ್: ಅರ್ಜುನ್ ಆನಂದ್
- ರಿದಮ್ ಪ್ಯಾಡ್: ವರದರಾಜ್
- ಕೀಬೋರ್ಡ್: ಟೋನಿ ಮ್ಯಾಥ್ಯೂ
- ಧ್ವನಿತಂತ್ರಜ್ಞಾನ: ಬಾಲಕೃಷ್ಣ ರಾವ್
ಭಾವಗೀತ
೧
“ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸಾ”
ಮಸೆದ ಗಾಳಿ ಪಕ್ಕ ಪಡೆಯುತಿತ್ತು ಸಹಜ ಪ್ರಾಸಾ
ಮಿಂಚಿ ಮಾಯವಾಗುತಿತ್ತು ಒಂದು ಮಂದಹಾಸಾ
ಭೃಂಗದ ಬೆನ್ನೇರಿ ಬಂತು ……….
೨
ಏನು ಏನು? ಜೇನು ಜೇನು? ಎನೆ ಗಂಗುಂ ಗಾನಾ
ಓಂಕಾರದ ಶಂಖನಾದಕಿಂತ ಕಿಂಚಿದೂನಾ
ಕವಿಯ ಏಕತಾನ ಕವನದಂತೆ ನಾದಲೀನಾ
ಭೃಂಗದ ಬೆನ್ನೇರಿ ಬಂತು ……….
೩
ಒಡಲ ನೂಲಿನಿಂದ ನೇಯುವಂತೆ ಜೇಡ ಜಾಲಾ
ತನ್ನ ದೈವರೇಷೆ ಬರೆಯುವಂತೆ ತಾನೆ ಭಾಲಾ
ಉಸಿರಿನಿಂದೆ ಹುಡುಕುವಂತೆ ತನ್ನ ಬಾಳ ಮೇಲಾ
ಭೃಂಗದ ಬೆನ್ನೇರಿ ಬಂತು ……….
೪
ತಿರುಗುತಿತ್ತು ತನ್ನ ಸುತ್ತು ಮೂಕಭಾವ ಯಂತ್ರಾ
ಗರ್ಭಗುಡಿಯ ಗರ್ಭದಲ್ಲಿ ಪಡಿನುಡಿಯುವ ಮಂತ್ರಾ
ಮೂಡಿ ಮೂಡಿ ಮುಳುಗಿ ಮುಳುಗಿ ಮೊಳಗುವೊಲು ಸ್ವತಂತ್ರಾ
ಭೃಂಗದ ಬೆನ್ನೇರಿ ಬಂತು ……….
೫
ಎಲ್ಲೆಲ್ಲೂ ಸೃಷ್ಟಿದೇವಿಗಿಟ್ಟ ಧೂಪ ಧೂಮಾ
ಲಹರಿ ಲಹರಿ ಕಂಪಬಳ್ಳಿ; ಚಿತ್ತರಂಗ ಭೂಮಾ
ದಾಂಗುಡಿಗಳ ಬಿಡುತಲಿತ್ತು ಅರಳಲಿತ್ತು ಪ್ರೇಮಾ
ಭೃಂಗದ ಬೆನ್ನೇರಿ ಬಂತು ……….
೬
ವಜ್ರಮುಖವ ಚಾಚಿ ಮುತ್ತುತಿತ್ತು ಹೂವ ಹೂವಾ
ನೀರ ಹೀರಿ ಹಾರುತಿತ್ತು ನೀರಸವಾ ಜಾವಾ
ಅಯ್ಯೊ ನೋವೆ! ಅಹಹ ಸಾವೆ! ವಿಫಲ ಸಫಲ ಜೀವಾ
ಭೃಂಗದ ಬೆನ್ನೇರಿ ಬಂತು ……….
೭
ಗಾಳಿಯೊಡನೆ ತಿಳ್ಳಿಯಾಡುತಾಡುತದರ ಓಟಾ
ದಿಕ್ತಟಗಳ ಹಾಯುತಿತ್ತು ಅದರ ಬಿದಿಗೆ ನೋಟಾ
ನಕ್ಕ ನಗುವ ಚಿಕ್ಕೆಯೊಡನೆ ಬೆಳೆಸುತಿತ್ತು ಕೂಟಾ
ಭೃಂಗದ ಬೆನ್ನೇರಿ ಬಂತು ……….
೮
ಅಂತು ಇಂತು ಪ್ರಾಣತಂತು ಹೆಣೆಯುತಿತ್ತು ಬಾಳಾ
ಅಲ್ಲು ಇಲ್ಲು ಚೆಲುವು ನಿಂತು ಹಾಕುತಿತ್ತು ತಾಳಾ
'ಬಂತೆಲ್ಲಿಗೆ?' ಕೇಳುತಿದ್ದನೀಯನಂತ ಕಾಳಾ
ಭೃಂಗದ ಬೆನ್ನೇರಿ ಬಂತು ……….
೯
ಮಾತು ಮಾತು ಮಥಿಸಿ ಬಂದ ನಾದದ ನವನೀತಾ
ಹಿಗ್ಗಬೀರಿ ಹಿಗ್ಗಲಿತ್ತು ತನ್ನ ತಾನೆ ಪ್ರೀತಾ
ಅರ್ಥವಿಲ್ಲ ಸ್ವಾರ್ಥವಿಲ್ಲ ಬರಿಯ ಭಾವಗೀತಾ
ಭೃಂಗದ ಬೆನ್ನೇರಿ ಬಂತು ……….
೧೦
ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸಾ
ಮಸೆದ ಗಾಳಿ ಪಕ್ಕಪಡೆಯುತಿತ್ತು ಸಹಜ ಪ್ರಾಸಾ
ಮಿಂಚಿ ಮಾಯವಾಗುತಿತ್ತು ಒಂದು ಮಂದಹಾಸಾ
ಭೃಂಗದ ಬೆನ್ನೇರಿ ಬಂತು ……….
- ಅಂಬಿಕಾತನಯದತ್ತ
ನಾದಲೀಲೆ: 50
ಪ್ರಕಾಶನ: 1938
Comments
Post a Comment